ಬೆಂಗಳೂರು, ಫೆ.16- ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು (Critical Care Block) ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.
ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್ ಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‍ಗಳನ್ನು ಖರೀದಿಸಲಾಗುವುದು ಎಂದರು.
ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.