ಬೆಂಗಳೂರು, ಮಾ.12- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಂತ್ರಿಗಳು ಮತ್ತು ಪ್ರಭಾವಿ ನಾಯಕರ ಕುಟುಂಬದವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
ಕಳೆದ ರಾತ್ರಿ ಮತ್ತು ಇಂದೂ ಕೂಡ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ತಂಡ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಶಿಫಾರಸು ಮಾಡಲು
ನಿರ್ಧರಿಸಿದೆ.
ಎಐಸಿಸಿ ಯ ಸ್ಕ್ರೀನಿಂಗ್ ಸಮಿತಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಸಚಿವ ಜಿ ಪರಮೇಶ್ವರ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಲವು ಕ್ಷೇತ್ರಗಳಿಗೆ ಪ್ರಭಾವಿ ನಾಯಕರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಿದರು.
ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸಿಇಸಿ ಈಗಾಗಲೇ ಪ್ರಕಟಿಸಿದೆ.ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸಿದ್ಧಪಡಿಸಿರುವ ಪ್ರತ್ಯೇಕ ಪಟ್ಟಿಗಳ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಚಿಕ್ಕೋಡಿ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ದಾವಣಗೆರೆ ಕ್ಷೇತ್ರದಿಂದ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾವತಿ ಮಲ್ಲಿಕಾರ್ಜುನ್ ಮತ್ತು ಧಾರವಾಡ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಸ್ಕ್ರೀನಿಂಗ್ ಕಮಿಟಿ ತೀರ್ಮಾನಿಸಿದೆ ಬೆಳಗಾವಿಯಿಂದ ತಮ್ಮಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಸಮ್ಮತಿಸಿದರೆ, ಚಿಕ್ಕೋಡಿಯಿಂದ ತಮ್ಮ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ಸಮ್ಮತಿಸಿಲ್ಲ ತಮ್ಮ ಪುತ್ರಿಯ ಬದಲಿಗೆ ಹಿಂದುಳಿದ ಸಮುದಾಯಕ್ಕೆ ಸೇರಿದ ಲಕ್ಷ್ಮಣರಾವ್ ತಿಂಗಳೆ ಅವರಿಗೆ ಟಿಕೆಟ್ ನೀಡಬೇಕು ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಸಚಿವ ಜಾರಕಿಹೊಳಿ ಪಟ್ಟು ಹಿಡಿದಿರುವುದಾಗಿ ಗೊತ್ತಾಗಿದೆ.
ಅದೇ ರೀತಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಸಚಿವ ರಾಮಲಿಂಗ ರೆಡ್ಡಿ ಸಮ್ಮತಿಸಿಲ್ಲ ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಇಬ್ಬರಿಗೂ ತಮ್ಮ ಪುತ್ರಿಯರನ್ನು ಕಣಕ್ಕಿಳಿಸಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು ಇದು ಪಕ್ಷದ ನಿರ್ಧಾರವಾಗಿದೆ ಎಂದು ಹೇಳಿ ಮನವರಿಕೆ ಮಾಡಿಕೊಡಲು ಪ್ರಯತ್ನ ಮಾಡಿದ್ದಾರೆ ಇದಕ್ಕೆ ಈ ಇಬ್ಬರೂ ಎರಡು ದಿನದ ಸಮಯಾವಕಾಶ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಉಡುಪಿ–ಚಿಕ್ಕಮಗಳೂರು, ಚಿಕ್ಕೋಡಿ, ಮೈಸೂರು, ಚಿತ್ರದುರ್ಗ, ರಾಯಚೂರು ಮತ್ತು ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿದೆ’ ಎಂದು ಮೂಲಗಳು
ತಿಳಿಸಿವೆ.
ಸಮಿತಿಯ ಅಧ್ಯಕ್ಷ ಹರೀಶ್ ಚೌಧರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ವಿಶ್ವಜಿತ್ ಕದಂ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಭಾಗವಹಿಸಿದರು.