ಹೈದರಾಬಾದ್,ಜೂ.5-ಜುಬಿಲಿ ಹಿಲ್ಸ್‌ನಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿ ಶಾಸಕರೊಬ್ಬರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂರು ಆರೋಪಿಗಳನ್ನು ಬಂಧಿಸಲಾಗಿದ್ದು ಈಗ ಶಾಸಕರೊಬ್ಬನ ಪುತ್ರನನ್ನು ಬಂಧಿಸಲಾಗಿದೆ ಕೃತ್ಯದ ಐದನೇ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.
ಆರೋಪಿಗಳೆಂದು ಗುರುತಿಸಲಾದ ಐವರ ಪೈಕಿ ಪೊಲೀಸರು ಈಗಾಗಲೇ ಸಾದುದ್ದೀನ್ ಮಲಿಕ್‌ನನ್ನು ಎರಡು ದಿನಗಳ ಹಿಂದೆ ಬಂಧಿಸಿದ್ದರು. ಇನ್ನೋರ್ವ ಆರೋಪಿ ಉಮ್ರಾನ್ ಖಾನ್ ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಅಪ್ರಾಪ್ತ ಬಾಲಕ ಇನ್ನೂ ತಲೆಮರೆಸಿಕೊಂಡಿದ್ದಾನೆ.
ಜುಬಿಲಿ ಹಿಲ್ಸ್‌ನಲ್ಲಿ ಕಳೆದ ಮೇ 31ರಂದು ಪಬ್ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರು ಆರೋಪಿಗಳ ಪೈಕಿ ಸಾದುದ್ದೀನ್ ಮಲಿಕ್ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಉಮರ್ಖಾನ್ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರತಿಪಕ್ಷಗಳ ಟೀಕೆ:
ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಾಯಕ ಭಟ್ಟಿ ಕೂಡ ಟಿಆರ್ಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಜನಸೇನಾ ಪ್ರತಿಭಟನೆ
ಸಾಮೂಹಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಜನಸೇನಾ ಕಾರ್ಯಕರ್ತರು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಠಾಣೆಯೊಳಗೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುಮಾರು 30 ಜನರನ್ನು ಪೊಲೀಸರು ಬಂಧಿಸಿದ್ದಾರೆ.