ಬೆಂಗಳೂರು, ಸೆ.8 – ಲೋಕಸಭೆ Electionಯಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಘಟನೆಯಲ್ಲಿ ಕ್ಷೀಣಿಸಿರುವ ಹಳೆ ಮೈಸೂರು ಪ್ರದೇಶದಲ್ಲಿ ಪ್ರಾಬಲ್ಯಗಳಿಸುವ ದೃಷ್ಟಿಯಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.
ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದೆ.ಇದರ ಭಾಗವಾಗಿ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.
ಈ ವಿಷಯವನ್ನು ಬಹಿರಂಗ ಪಡಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ,ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿಯಲಿದ್ದು ಬಹುತೇಕ ಸೀಟು ಹಂಚಿಕೆ ಅಂತಿಮಗೊಂಡಿದೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತ. ರಾಷ್ಟ್ರ ಹಾಗೂ ರಾಜ್ಯದ ಜನತೆಯ ದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯವಾಗಿದೆ. ಸೀಟು ಹಂಚಿಕೆ ಕೂಡ ಅಂತಿಮಗೊಂಡಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.
ಇತ್ತೀಚೆಗೆ ನವದೆಹಲಿಗೆ ತೆರಳಿದ್ದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎನ್ನುತ್ತಿರುವಾಗಲೆ ಯಡಿಯೂರಪ್ಪ ಅವರ ಈ ಹೇಳಿಕೆ ಎಲ್ಲದಕ್ಕೂ ಸ್ಪಷ್ಟನೆ ನೀಡಿದೆ.
ಸ್ವಾಗತಾರ್ಹ:
ಮೈತ್ರಿ ಬೆಳವಣಿಗೆಯನ್ನು ಉಭಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ.ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುವಂತೆ ವರಿಷ್ಠ ಎಚ್.ಡಿ. ದೇವೇಗೌಡರನ್ನು ಕೋರಿದ್ದೇನೆ’ ಎಂದು ಶಾಸಕ, ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಎಚ್.ಡಿ. ಕುಮಾರಸ್ವಾಮಿ ಅವರನ್ನು ಹೊಟ್ಟೆ ಉರಿಯಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲಾಗುತ್ತಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎನ್ನುವ ಅಭಿಪ್ರಾಯ ಬಂತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಎಚ್.ಡಿ. ದೇವೇಗೌಡರು ನಮಗೆ ಧೈರ್ಯ ತುಂಬಿದ್ದರು’ ಎಂದು ತಿಳಿಸಿದರು.
ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ ಇದೊಂದು ಸ್ವಾಗತಾರ್ಹ ಬೆಳವಣಿಗೆ.ಜೆಡಿಎಸ್–ಬಿಜೆಪಿ ಮೈತ್ರಿಗೆ ನಮ್ಮ ಸಹಮತವಿದೆ’ ಎಂದು ಹೇಳಿದರು.