ಬೆಂಗಳೂರು, ಆ. 22– ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಹೊಡೆದ ಬೆನ್ನಲ್ಲೇ ರಾಜ್ಯದ ಎಲ್ಲಾ ಮಾಜಿ ಮುಖ್ಯಮಂತ್ರಿಗಳಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ.
ಕೇವಲ ಸಿದ್ದರಾಮಯ್ಯನವರಿಗೆ ಮಾತ್ರವಲ್ಲ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೂ ಝಡ್ ಶ್ರೇಣಿಯ ಭದ್ರತೆ ಒದಗಿಸಿ ಎಂದು ಗೃಹ ಇಲಾಖೆ ಆದೇಶ ಹೊರಡಿಸಿದೆ.
ಮೊನ್ನೆ ಮಳೆಯಿಂದ ಹಾನಿಗೀಡಾದ ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ತೆರಳಿದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅವರಿಗೆ ವ್ಯಾಪಕ ಭದ್ರತೆ ಹೆಚ್ಚಿಸಲಾಗಿತ್ತು.
ನೂತನ ಆದೇಶದ ಅನ್ವಯ ಎಲ್ಲಾ ಮಾಜಿ ಸಿಎಂ ಗಳಿಗೆ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ 21 ಮಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಸಿಬ್ಬಂದಿಗಳು ಮೂರು ಪಾಳಿಯಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸಬೇಕು. ಅವರು ಎಲ್ಲಿ ಹೋದರು ಮುನ್ನೆಚ್ಚರಿಕೆ ವಹಿಸುವಂತೆ ಪ್ರತಿಯೊಬ್ಬ ಸಿಬ್ಬಂದಿಗೂ ಸೂಚನೆ ನೀಡಲಾಗಿದೆ.
ಬೆಂಗಳೂರಿನಿಂದ ಹೊರ ಹೋಗುವ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಲು, ಸ್ಥಳೀಯ ಪೊಲೀಸರು ಭದ್ರತೆಗಾಗಿ ಹೆಚ್ಚಿನ ಪೊಲೀಸರು ಜವಾಬ್ದಾರಿ ತೆಗೆದುಕೊಳ್ಳಬೇಕು ಗೃಹ ಇಲಾಖೆ ನೀಡಿದೆ.
ಜಿಲ್ಲಾ ಪ್ರವಾಸದ ವೇಳೆ ಸಂದರ್ಭಾನುಸಾರ ಸಿಬ್ಬಂದಿ ಹೆಚ್ಚಳ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.