ಬೆಂಗಳೂರು,ಅ.16:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮರೀಗೌಡ ರಾಜೀನಾಮೆ ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಮರೀಗೌಡ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾಚೋಳನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ತಮಗೆ ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ. ಮುಡಾ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ನಿವೇಶನ ವಿಚಾರವಾಗಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು, ನಲವತ್ತು ವರ್ಷಗಳಿಂದ ಜತೆಯಲ್ಲೇ ಇದ್ದೇನೆ. ತಾಲ್ಲೂಕು, ಜಿಲ್ಲಾಪಂಚಾಯ್ತಿ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿಗಳು ತಮ್ಮನ್ನು ನೇಮಕ ಮಾಡಿದ್ದರು. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹೇರಿಲ್ಲ ಎಂದು ತಿಳಿಸಿದರು. ತಮಗೆ ಎರಡು ಬಾರಿ ಪಾರ್ಶ್ವವಾಯು ಆಗಿತ್ತು. ಆರೋಗ್ಯ ಸರಿಯಿಲ್ಲ. ಆದ್ದರಿಂದ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು
ನಗರಾಭಿವೃದ್ಧಿ ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಹೇರಿದ್ದರು ಎಂಬ ಮಾತುಗಳು ಸತ್ಯಕ್ಕೆ ದೂರವಾದದು ಎಂದು ಮರೀಗೌಡ ತಿಳಿಸಿದರು.