ಬೆಂಗಳೂರು,ಆ.6- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರದಲ್ಲಿ ಅಲ್ಪ ಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ.ಅಧಿಕಾರಿಗಳಿಗೆ ಉನ್ನತ ಹುದ್ದೆ ಕೊಟ್ಟಿಲ್ಲ. ಸಚಿವ ಸಂಪುಟದಲ್ಲಿ ನಿರೀಕ್ಷಿತ ಸ್ಥಾನಮಾನ ನೀಡಿಲ್ಲ. ಪ್ರಮುಖ ಖಾತೆಗಳಲ್ಲೂ ಅವಕಾಶಕೊಟ್ಟಿಲ್ಲ ಎಂದು ಸಮುದಾಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅಳಲು ತೋಡಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತರ ಪಾತ್ರ ಮಹತ್ವದಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಅಲ್ಪಸಂಖ್ಯಾತರು ನಿರ್ಣಾಯಕವಾಗಲಿದ್ದಾರೆ. ಆದರೂ ಕಾಂಗ್ರೆಸ್ ನಾಯಕತ್ವ ಈ ಸಮುದಾಯಕ್ಕೆ ಮಾನ್ಯತೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸಮ್ಮುಖದಲ್ಲಿ ಅಳಲು ತೋಡಿಕೊಂಡರು.
ಚುನಾವಣೆ ಸಮಯದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡಲಾಗಿದ್ದು, ಅದು ಈಡೇರಿಲ್ಲ. ಇದೇ ರೀತಿ ಮುಂದುವರೆದರೆ ಅಲ್ಪಸಂಖ್ಯಾತರು ನಿರಾಶೆಗೊಳ್ಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದೆಂದು ಅಲ್ಪಸಂಖ್ಯಾತ ಮುಖಂಡರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ನಡೆಯುವ ನಿಗಮ ಮಂಡಳಿ ನೇಮಕಾತಿ ಹಾಗು ಇತರೆ ಸಂದರ್ಭಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಮೂರು ಕಡೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಬೇಡಿಕೆ ಮಂಡಿಸಲಾಗಿದೆ ಹಿಂದಿನ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಸಣ್ಣ ಟ್ವೀಟ್ ಮಾಡಿದರೂ ದೇಶದ್ರೋಹದಂತಹ ಕಠಿಣ ಕಾನೂನುಗಳನ್ನು ಬಳಸಿ ಹತ್ತಿಕ್ಕಿಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರಿಗೆ ರಕ್ಷಣೆ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ ಅಲ್ಲಲ್ಲಿ ದ್ವೇಷದ ಘಟನೆಗಳು ಮರುಕಳಿಸುತ್ತಲೇ ಇವೆ. ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕಲಾಗುತ್ತಿದೆ ಎಂಬ ಆಕ್ಷೇಪವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ, ಮಂಗಳೂರು, ಬೆಂಗಳೂರು ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದಲ್ಲಿ ಅಮಾಯಕರ ವಿರುದ್ಧ ದಾಖಲಾಗಿಸಿರುವ ಪ್ರಕರಣಗಳನ್ನು ಹಿಂಪಡೆಯುವಲ್ಲಿ ಸರ್ಕಾರ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು, ಟೀಕೆಗಳು, ಆರೋಪಗಳಿಗೆ ಹೆದರಿ ತಟಸ್ಥ ನಿಲುವು ಅನುಸರಿಸಬಾರದು. ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗುವ ಜೊತೆಗೆ ನಿರಪರಾಧಿಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.
Latest Kannada News
Also read