ಬೆಂಗಳೂರು, ಜ.18- 545 ಮಂದಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ( ಪಿಎಸ್ಐ) ನೇಮಕಾತಿ ಅಕ್ರಮ (PSI Scam) ಪ್ರಕರಣ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಸಮಿತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವುದು ಪತ್ತೆಯಾಗಿ ಸಿಬಿಐ ತನಿಖೆಯನ್ನು ಕೈಗೊಳ್ಳಲಾಗಿತ್ತು.
ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗವು ಪಿಎಸ್ಐ ನೇಮಕಾತಿಯ ಅಕ್ರಮದ ವರದಿಯನ್ನು ಬಹುತೇಕ ಸಿದ್ದಪಡಿಸಿದೆ.
ಇದೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರಣಾ ಆಯೋಗವು ಅಕ್ರಮದ ವರದಿ ಸಲ್ಲಿಸುವ ಸಾಧ್ಯತೆ ಇದೆ. ಅಕ್ರಮ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗ ಎಡಿಜಿಪಿ ಅಮೃತ್ ಪಾಲ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಕೆಲ ರಾಜಕಾರಣಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು.