ಬೆಂಗಳೂರು ,ಜ.18: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಂವಿಧಾನ ಅರಿವು ಮೂಡಿಸುವ ಸಲುವಾಗಿ ಆಯೋಜಿಸಿರುವ ಅಭಿಯಾನದಲ್ಲಿ ಯಾವುದೇ ಲೋಪವಾದರೂ ಪಂಚಾಯತಿ ಮಟ್ಟದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಒಂದು ತಿಂಗಳ ಕಾಲ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಗೃತಿ ಜಾಥ ಹಾಗೂ ಸ್ಥಬ್ಧಚಿತ್ರ ಮೆರವಣಿಗೆ ಹೊರಡಿಸಲು ರಾಜ್ಯ ಸರ್ಕಾರದ ನಿರ್ಧಾರಕ್ಕನುಗುಣವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲೆಗಳನ್ನು ಸಂಪೂರ್ಣವಾಗಿ ಸಜ್ಜುಗೊಳಿಸಿದ್ದಾರೆ.
ರಾಜಧಾನಿಯಲ್ಲಿನ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇಂದು ವಿಡಿಯೊ ಸಮಾವೇಶ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ವಿವಿಧ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು.
ಸಂವಿಧಾನ ಪೀಠಿಕೆ ಬೋಧನೆ, ಸಂವಿಧಾನದ ಮೂಲ ಆಶಯಗಳನ್ನು ಕುರಿತಂತೆ ಪರಿಣಿತರಿಂದ ಉಪನ್ಯಾಸ, ಕರಪತ್ರಗಳ ವಿತರಣೆ, ನಾಟಕ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ, ಜಾನಪದ ಕಲಾ ತಂಡಗಳ ಸಜ್ಜು ಮುಂತಾದವುಗಳ ಮೂಲಕ ಜಾಥ ಯಶಸ್ವಿಗೊಳಿಸಲು ಆದ್ಯತೆ ನೀಡಬೇಕೆಂದು ಸಚಿವರು ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗ್ರಾಮ ಪಂಚಾಯತಿ ಅಧ್ಯಕ್ಷರುಗಳನ್ನು ಕಾರ್ಯಕ್ರಮದಲ್ಲಿ ಸಕಿಯವಾಗಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸಬೇಕೆಂದೂ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸರ್ಕಾರ ಸಂವಿಧಾನದ ಬಗ್ಗೆ ಅಪಾರ ವಿಶ್ವಾಸ ಇರಿಸಿಕೊಂಡು ಊನ್ನತವಾದ ಆಶಯಗಳೊಂದಿಗೆ ಸಂವಿಧಾನ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ, ಈ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸದೆ ಇದ್ದಲ್ಲಿ ಪಂಚಾಯತಿ ಅಧಿಕಾರಿಗಳ ಮೇಲೆ ಕಠಿಣ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು