ಬೆಂಗಳೂರು, ಜೂ.13:
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ಕೈಗೆತ್ತಿಕೊಂಡಿರುವ ಸಿಹಿಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದ್ದರು.
ಆದರೆ ಯಡಿಯೂರಪ್ಪ ತಕ್ಷಣವೇ ವಿಚಾರಣೆಗೆ ಹಾಜರಾಗಲು ನಿರಾಕರಿಸಿ, ತಾವು ಪೂರ್ವಾಹ್ನಿ ಜೊತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಮತ್ತೊಂದಡೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದ್ದು ಅದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಎಲ್ಲಾ ಬೆಳವಣಿಗೆಗಳ ನಡುವೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಅವರ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್, ಬಿಎಸ್ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು.ನ್ಯಾಯಾಲಯದ ಈ ಆದೇಶದಿಂದ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.
ಮತ್ತೊಂದೆಡೆಯಲ್ಲಿ ಅಪ್ರಾಪ್ತ ಬಾಲಕಿಯ ಸೋದರ ಹೈಕೋರ್ಟ್ ಮೊರೆ ಹೋಗಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅತ್ಯಂತ ಪ್ರಭಾವಿಯಾಗಿದ್ದಾರೆ ಅವರ ಒಬ್ಬ ಮಗ ಸಂಸದರಾಗಿದ್ದು ಇನ್ನೊಬ್ಬ ಮಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ ಹೀಗಾಗಿ ಅವರು ಪ್ರಕರಣದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ, ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸಲು ಸೂಚಿಸಬೇಕು ಎಂದು ಕೋರಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024 ರ ಮಾರ್ಚ್ 3 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.
Previous Articleರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!
Next Article ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.