ಬೆಂಗಳೂರು.ಡಿ.31:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಸಿಟಿ ರವಿ ಇದೀಗ ತಮ್ಮನ್ನು ಬಂಧಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರಿಗೆ ಸಮಗ್ರ ವರದಿ ನೀಡಿದ ನಂತರ ಅವರು ಇದೀಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದಾರೆ.
ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ಬೆಳಗಾವಿಯಲ್ಲಿ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ನನ್ನನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಪೊಲೀಸರು ಬಂಧಿಸಿದ್ದರು. ದೂರು ಕೊಟ್ಟ ಬಳಿಕವೂ ಪೊಲೀಸರು ಎಫ್.ಐ.ಆರ್. ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿದ್ದರು ಎಂದು ಅವರು ದೂರಿನಲ್ಲಿ ಆರೋಪಿಸಿದ್ದು, ಕರ್ತವ್ಯ ಲೋಪ ಎಸಗಿದ ಈ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ