ಮಂಡ್ಯ.ಮೇ.14; ಮಂಡ್ಯ ಜಿಲ್ಲೆಯಲ್ಲಿ ಪರಿವರ್ತನಾ ಯುಗ ಪ್ರಾರಂಭವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಮಂಡಲ ಕಾರ್ಯಕರ್ತರ ಸಮಾವೇಶ ಹಾಗು ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಮತ್ತು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತ್ರತ್ವದಲ್ಲಿ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಇದರ ಜೊತೆಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುವ ಕೆಲಸ ಈಗಾಗಲೇ ಆರಂಭಗೊಂಡಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ, ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿರುವ ಜನಪರ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ.ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆ ಮಾಡಲಾಗುವುದು ಎಂದು ಹೇಳಿದರು.
ಸಚಿವರಾದ ಕೆ.ಸಿ.ನಾರಾಯಣ ಗೌಡರು, ಸಂಸದರಾದ ಪ್ರತಾಪ್ ಸಿಂಹ, ಸಿ.ಪಿ.ಯೋಗೀಶ್,ರವಿಕುಮಾರ್, ಮಹೇಶ್ ಸೇರಿದಂತೆ ಈ ಭಾಗದ ಎಲ್ಲ ಮುಖಂಡರೊಟ್ಟಿಗೆ ಕುಳಿತುಕೊಂಡು ಸಭೆ ನಡೆಸಿ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.