ಬೆಂಗಳೂರು,ಸೆ.28-ಅತ್ಯಾಚಾರ,ಹನಿಟ್ರ್ಯಾಪ್ ಷಡ್ಯಂತ್ರ,ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ)ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.
ವೈಯಾಲಿಕಾವಲ್ ನಿವಾಸ ಕಚೇರಿಯ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.
ಮುನಿರತ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮೊದಲು ಮುನಿರತ್ನ ಬಂಧನವಾಗಿತ್ತು. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅದಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.
ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಹನಿಟ್ರ್ಯಾಪ್ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದ ಬೆನ್ನಲ್ಲೇ ಜೈಲಿನಿಂದ ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿತ್ತು.
Previous Articleಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
Next Article ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.