ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು ಬಿಜೆಪಿ ಪಾಳೆಯದಲ್ಲಿ ಬಿರುಸಿನ ಚಟುವಟಿಕೆ ನಡೆದಿವೆ.
ನಾಯಕತ್ವ ಬದಲಾವಣೆಯೂ ಸೇರಿದಂತೆ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವ ಸಾಧ್ಯತೆಯಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ
ಶಾ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿ ಕಛೇರಿಯಲ್ಲಿ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಈ ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ವಿವಿಧ ಜಿಲ್ಲೆಗಳಲ್ಲಿ ನಾಯಕರ ನಡುವಿನ ಭಿನ್ನಮತ, ಸರ್ಕಾರದ ವರ್ಚಸ್ಸು ಸೇರಿ ಹಲವಾರು ವಿಷಯಗಳ ಚರ್ಚೆ ನಡೆಯಿತು.
ನಾಳ ಮಧ್ಯಾಹ್ನ ೨ ಗಂಟೆಗೆ ಮುಖ್ಯಮಂತ್ರಿಗಳ ನಿವಾಸದಲ್ಲಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಲಿರುವ ಅಮಿತ್ ಶಾ ಸಂಜೆ ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗು ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ಪಕ್ಷವನ್ನು ಅಧಿಕಾರಕ್ಕೆ ತರಲು ರಣತಂತ್ರ ಸಿದ್ದಪಡಿಸಿ ರಾಜ್ಯ ಮತ್ತು ಸರ್ಕಾರಕ್ಕೆ ಅಮಿತ್ ಷಾ ಹೊಸ ಗುರಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಸಂಪುಟದಲ್ಲಿ ಯಾರಿಗೆ ಅವಕಾಶ ನೀಡಬೇಕು. ಯಾರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಬೇಕು. ಯುವಕರಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯಲಿದೆ.
ಸಂಪುಟ ವಿಸ್ತರಣೆ ಅಥವ ಪುನಾರಚನೆ ನಿಗಮ ಮಂಡಲಿಗೆ ಅಧ್ಯಕ್ಷರ ನೇಮಕ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ
Previous Articleಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!
Next Article ಅಕ್ರಮದ ಬೆನ್ನು ಹತ್ತಿದ ಸಿಐಡಿ