ಬೆಂಗಳೂರು.ಏ.30:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರ ಹಾಕುವ ತಾಕತ್ತು ನಿಮಗಿದೆಯಾ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಎಂದು ಕೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಬಿಜೆಪಿ ಕಾರ್ಯಕರ್ತರು ವಿರುದ್ಧ ಕಿಡಿ ಕಾರಿದ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಹೇಳಿರುವುದಕ್ಕೆ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ
ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು,ಉತ್ತರನ ಪೌರುಷ ಒಲೆಯ ಮುಂದೆ’ ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತ ಎಂದು ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ’ ಎಂದು ಹೇಳಿದ್ದಾರೆ.
‘ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಬಿಜೆಪಿ ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ತಮಗೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.