ಬೆಂಗಳೂರು, ಡಿ.16:
ನಕಲಿ ದಾಖಲೆ ವೀರನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಐನಾತಿ ವಂಚಕ ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.
ಈತನ ವಂಚನೆಯ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು.
ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬುದು ಬಯಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.
ನಕಲಿ ದಾಖಲೆ ಸೃಷ್ಟಿಸಿ ಯಾರೇ ಅರಣ್ಯ ಭೂಮಿ ಕಬಳಿಸಲು ಯತ್ನಿಸಿದರೂ ಅರಣ್ಯ ಸಚಿವರಾಗಿ ತಾವು ಬಿಡುವುದಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?
Previous Articleಕಸ್ತೂರಿ ರಂಗನ್ ವರದಿ ತಿರಸ್ಕಾರ
Next Article 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

