ಉಡುಪಿ: ಮಳೆ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ಈವರೆಗೆ 32 ಮಂದಿ ಅಸುನೀಗಿದ್ದು, ಸಂತ್ರಸ್ತರಾದವರಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಪತ್ತು ನಿರ್ವಹಣಾ ಖಾತೆಯಲ್ಲಿರುವ ಹಣವನ್ನು ಜಿಲ್ಲಾಧಿಕಾರಿಗಳು ಬಳಸಿಕೊಳ್ಳಬೇಕು. ಅಗತ್ಯ ಆಹಾರ ವಸ್ತುಗಳನ್ನು ನೆರೆಪೀಡಿತರ ಮನೆಗಳಿಗೆ ತಲುಪಿಸಬೇಕು ಎಂದು ಆದೇಶಿಸಿದ್ದಾರೆ. ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಳಜಿ ಕೇಂದ್ರಕ್ಕೆ ಸಂತ್ರಸ್ತರು ಬರಲು ಒಪ್ಪುತ್ತಿಲ್ಲ. ಸಂತ್ರಸ್ತರು ಒಂದು ವೇಳೆ ಅವರ ಸಂಬಂಧಿಗಳು ಅಥವ ಗೆಳೆಯರ ಮನೆಗಳಲ್ಲಿ ಉಳಿದುಕೊಂಡಿದ್ದರೆ ಅಲ್ಲಿಗೇ ದಿನಸಿ ತಲುಪಿಸಬೇಕು ಎಂದು ಆದೇಶ ನೀಡಿದರು.
ಶೀಘ್ರವೇ ರಸ್ತೆ ಡಾಂಬರೀಕರಣ ಮತ್ತು ಕಾಂಕ್ರಿಟೀಕರಣ ಪ್ರಕ್ರಿಯೆ ಆರಂಭಿಸಬೇಕು ಎಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ ನಡೆದಿದೆ ಎಂದರು.
10 ದಿನಗಳ ನಂತರ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ ಎಂದು ಹೇಳಿದರು.
ಭೂಕಂಪ ಮತ್ತು ಭೂಕುಸಿತವಾದ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಲು ನಾಲ್ಕು ಸಂಸ್ಥೆಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮಣಿಪಾಲದ ರಜತಾದ್ರಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಮೂರೂ ಜಿಲ್ಲೆಗಳ ಶಾಸಕರು, ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
355 ಹೆಕ್ಟೇರ್ ಬೆಳೆ ನಾಶ:
ಐವರು ಕಾಣೆಯಾಗಿದ್ದು, 34 ಮಂದಿ ಗಾಯಗೊಂಡಿದ್ದಾರೆ. 300 ಮಂದಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೆಎಮಳೆಯಿಂದಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ 355 ಹೆಕ್ಟೇರ್ ಬೆಳೆ ನಾಶವಾಗಿದ್ದು, 1,062 ಮನೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡದಲ್ಲಿ ಐವರು ಮತ್ತು ಉತ್ತರ ಕನ್ನಡದಲ್ಲಿ ಮೂವರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧೆಡೆ 14 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. 4 ರಾಷ್ಟ್ರೀಯ ವಿಪತ್ತು ರಕ್ಷಣಾ ತಂಡಗಳು, 4 ರಾಜ್ಯ ವಿಪತ್ತು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ವರ್ಷದ ಜುಲೈ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಮಳೆಯಿಂದ ರಾಜ್ಯದಲ್ಲಿ ಈವರೆಗೆ 32 ಜೀವಹಾನಿ, ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂ ಸೂಚನೆ
Previous Articleಕರಾವಳಿ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ: ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ..!
Next Article ಹೆಬ್ಬಾಳ್ಕರ್-ಯಡಿಯೂರಪ್ಪ ಮಾತುಕತೆ.. ಏನಿದರ ಗುಟ್ಟು?