ಬೆಂಗಳೂರು,ಆ.25- ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನವು ಸೆಪ್ಟೆಂಬರ್12ರಿಂದ 10 ದಿನಗಳ ಕಾಲ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು. ಸೆ.12ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಷಯ ತಿಳಿಸಿದರು.
ಭ್ರಷ್ಟಾಚಾರ ನಿಗ್ರಹ ದಳ ರದ್ದು ಪಡಿಸಿದ ಹೈಕೋರ್ಟ್ ರದ್ದುಪಡಿಸಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕೆಂಬ ನ್ಯಾಯಾಲಯ ನೀಡಿರುವ ತೀರ್ಪನ್ನು ಯಥಾವತ್ತಾಗಿ ಪಾಲಿಸಿ ಸುಪ್ರೀಂಕೋರ್ಟ್‍ಗೆ ಮನವಿ ಹಾಕದಿರಲು ಸಭೆ ತೀರ್ಮಾನಿಸಿದೆ ಎಂದರು.
ಲೋಕಾಯುಕ್ತ ಸಂಸ್ಥೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿ ವಿಚಾರಣೆಗೆ ಅನುಮತಿ ಸೇರಿದಂತೆ ಇತ್ಯಾದಿ ಹಲವು ಕ್ರಮಗಳನ್ನು ತೆಗದುಕೊಳ್ಳಲಿದೆ. ನ್ಯಾಯಾಲಯದಲ್ಲಿ ಹೈಕೋರ್ಟ್ ಆದೇಶದ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಹಾಕಿರಬಹುದು. ಅದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಾಯುಕ್ತ ಸಂಸ್ಥೆಯಲ್ಲಿ ಒಟ್ಟು 10 ಸ್ಥಾನಗಳಿದ್ದವು. ಇದರಲ್ಲಿ 7 ಸ್ಥಾನಗಳು ಖಾಲಿ ಇತ್ತು. ಇವುಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಮತ್ತಿತರ ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಿದರು.
ಬಹುದಿನಗಳ ಬೇಡಿಕೆಯಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಗಳನ್ನು ಪ್ರಾರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬೀದರ್, ಹಾಸನ, ಕೊಡುಗು, ಕೊಪ್ಪಳ , ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಯು ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯ ವಿವಿ ಯ ವಿಸ್ತರಣೆಯನ್ನು ಜಿಲ್ಲಾ ಘಟಕಕ್ಕೆ ವಿಸ್ತರಣೆ ಮಾಡಲಾಗಿದೆ ಎಂದರು.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ 190 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಬಿಎಂಪಿಯ ಪಂಥರಪಾಳ್ಯದಲ್ಲಿ ಅರ್ಧಕ್ಕೆ ನಿಂತಿದ್ದ 150 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.
Previous Articleಕೆ.ಜಿ.ಬೋಪಯ್ಯ ವಿರುದ್ಧ ಕಮೀಷನ್ ಆರೋಪ
Next Article ಕಮಿಷನರ್ ಕಚೇರಿ ಸಮೀಪವೇ ಕಾಲೇಜು ಹೊಡೆದಾಟ…!