ಬೆಂಗಳೂರು, ಜು. 11- ಕಳೆದ ಕೆಲವು ದಿನಗಳಿಂದ ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಳೆಯ ಅಬ್ಬರ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಮುಂದಿನ ನಾಲ್ಕು ದಿನಗಳ ಕಾಲ ಬಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಉತ್ತರ ಕರ್ನಾಟಕ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಾಲ್ಕು ದಿನ ಮಳೆ ಸುರಿಯಲಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೂರಿಕುಮೇರ್ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸ್ಥಳೀಯರು ರಾಶಿ ರಾಶಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಮುಂದಾಗಿದ್ದು ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಕಲ್ಪಿಸಲಾಗಿದೆ.
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣ ಅಬ್ಬರ ಮುಂದುವರೆದಿದ್ದು, ತುಂಗಾ ನದಿ ತುಂಬಿ ಹರಿಯುತ್ತಿರುವುದರಿಂದ ಕಿಕ್ರೆ- ಶೃಂಗೇರಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾರಿ ಮಳೆಯಿಂದಾಗಿ ಕಿಕ್ರೆ ಗ್ರಾಮ ದ್ವೀಪವಾಗಿ ಪರಿಣಮಿಸಿದೆ. ಸೇತುವೆ ಮುಳುಗಡೆಯಿಂದಾಗಿ ಜನರು ಪರದಾಡುವಂತಾಗಿದೆ. ಕಳಸ ಸಮೀಪ ಮಳೆಯಿಂದ ಮನೆ ಕುಸಿದು ತಾಯಿ-ಮಗಳ ಬೀದಿ ಪಾಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಅವಾಂತರ ನಿಂತಿಲ್ಲ. ಕುಸ್ಕೂರು ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಆದರೆ ಯಾವುದೇ ಪ್ರಾಣ ಹಾನಿಸಂಭವಿಸಿಲ್ಲ. ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.
Previous Article1.05 ಲಕ್ಷ ರೂ ಗೆ ಬಂಡೂರು ಟಗರು ಸೇಲ್.!
Next Article ನೂತನ ಸಂಸತ್ತಿನಲ್ಲಿ ಭಾರತದ ರಾಷ್ಟ್ರೀಯ ಲಾಂಛನ ಅನಾವರಣ