ಬೆಂಗಳೂರು,ಅ.7:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆ ಸೆಳೆಯಲು ಇಂತಹ ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ವಿಚಾರದಲ್ಲೂ ಇದೇ ತಂತ್ರ ರೂಪಿಸಿದ್ದಾರೆ ಎಂದು ದೂರಿದರು.
ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಸವಾಲು ಹಾಕಿದ ಅವರು,ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದರು
ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕ ಪ್ರಶ್ನಿಸಿದರು.
ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು
10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ಆಪಾದಿಸಿದರು.
ಈ ವಿಷಯದ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪ ಮಾಡಿದರು.
Previous Articleಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
Next Article ತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.