ಬೆಂಗಳೂರು,ನ.22- ವೈಟ್ ಫೀಲ್ಡ್ ನ ಕಾಡುಗೋಡಿ ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಆಕೆಯ 9 ತಿಂಗಳ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸ್ ಸೂಪರಿಂಟೆಂಡೆಂಟ್ ಪ್ರಕರಣ ಬಗ್ಗೆ ತನಿಖೆ ನಡೆಸಿ ಇಂಧನ ಇಲಾಖೆಯಿಂದ ಘಟನೆ ಬಗ್ಗೆ ವಿವರಣೆ ಕೇಳಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಿನ್ನೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಎಚ್‌ಆರ್‌ಸಿ, ಘಟನೆ ಬಗ್ಗೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.ಇದೀಗ ಲೋಕಾಯುಕ್ತ ಕೂಡ ಪ್ರಕರಣ ದಾಖಲಿಸಿದೆ.
ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ತಾಯಿ, ಮಗು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ತೋರುತ್ತದೆ. ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಂಡಿರಿ ಸಂತ್ರಸ್ತರಿಗೆ ಯಾವ ರೀತಿ ಪರಿಹಾರ ನೀಡಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಎನ್‌ಎಚ್‌ಆರ್‌ಸಿ ರಾಜ್ಯ ಸರ್ಕಾರ ಸೂಚಿಸಿದೆ.