ಬೆಂಗಳೂರು,ಮಾ.15- ರಾಜ್ಯದ ಪೊಲೀಸ್ ಮಾಹಾ ನಿರ್ದೇಶಕ ಪ್ರವೀಣ್ ಸೂದ್,ಬಿಜೆಪಿಯ ಸಕ್ರಿಯ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ದೂರಿದರು.
ಸರ್ಕಾರದ ಸೇವಾ ನಿಯಮಗಳನ್ನು ಗಾಳಿಗೆ ತೂರಿ ಕೇವಲ ಒಂದು ಪಕ್ಷಕ್ಕೆ ಸೀಮಿತವಾಗಿ ಕೆಲಸ ಮಾಡುತ್ತಿರುವ ಅವರನ್ನು ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ಡಿಜಿಪಿ ನಾಲಾಯಕ್ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ ಎಂದು ಆಪಾದಿಸಿದರು.