ಬೆಂಗಳೂರು,ಆ.12- ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಬಂಧಿಸಿರುವ ಸಿಸಿಬಿ ಪೊಲೀಸರು ಆತನ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಜೆಪಿ ನಗರದ ಪುನೀತ್ ಕೆರೆಹಳ್ಳಿ(32) ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
ಹಾಸನ ಮೂಲದ ಆರೋಪಿ ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದ.
2013ರಿಂದ ಕೊಲೆ, ಕೊಲೆಯತ್ನ, ದೊಂಬಿ, ಪ್ರಾಣ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಸೇರಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಯತ್ನ ನಡೆಸುತ್ತಿದ್ದ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿದೆ. ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ ಕೆರೆಹಳ್ಳಿ ಇತ್ತೀಚೆಗಷ್ಟೇ ಜಾಮೀನು ಮೂಲಕ ಬಿಡುಗೆಡೆಯಾಗಿದ್ದು, ಹಳೇ ಚಾಳಿ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಕೆರೆಹಳ್ಳಿಗೆ ನೋಟೀಸ್ ನೀಡಿದ್ದ ಚಿಕ್ಕಪೇಟೆ ಎಸಿಪಿ ಅವರು, ನಿನ್ನ ಮೇಲೆ ಯಾಕೆ ರೌಡಿಶೀಟ್ ತೆರೆಯಬಾರದು ಎಂಬುದಕ್ಕೆ ವಿವರಣೆ ನೀಡಬೇಕು. ಇಲ್ಲದಿದ್ದರೆ, ಯಾವುದೇ ವಿವರಣೆ ಇಲ್ಲ ಎಂದು ಭಾವಿಸಿ ರೌಡಿ ಪಟ್ಟಿ ತೆರೆಯುವುದಾಗಿ ಸೂಚಿಸಿದ್ದರು.
ಈ ಹಿಂದೆ ಭಾರೀ ಸದ್ದು ಮಾಡಿದ್ದ ಹಲಾಲ್ ಕಟ್ ಸೇರಿದಂತೆ ಹಲವು ಗಲಾಟೆಗಳಲ್ಲಿ ಪುನೀತ್ ಕೆರೆಹಳ್ಳಿ ಸಕ್ರಿಯನಾಗಿದ್ದ. ವಿಧಾನಸಭೆ ಚುನಾವಣೆ ಮುಂಚೆ ಗೋ ಸಾಗಾಟಗಾರರನ್ನು ಪೊಲೀಸ್ ಒಪ್ಪಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾನೆಂದು ಹೇಳಲಾಗಿತ್ತು. ರಾಮನಗರ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇತ್ತೀಚೆಗಷ್ಟೇ ಜಾಮೀನು ಮೇಲೆ ಪುನೀತ್ ಕೆರೆಹಳ್ಳಿ ಜೈಲಿನಿಂದ ಹೊರಗೆ ಬಂದಿದ್ದ. ಈಗ ಮತ್ತೆ ಬಂಧಿಸಲಾಗಿದೆ.