ಬೆಂಗಳೂರು : ಸೇವೆ ಖಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರಿಕೆ ಸಂಬಂಧಿಸಿದ ಸರ್ಕಾರದ ಆದೇಶ ಹೊರಬೀಳುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಪೌರ ಕಾರ್ಮಿಕರ ಪ್ರತಿಭಟನೆಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ಕಸ ವಿಲೇವಾರಿ ವ್ಯತ್ಯಯ ಉಂಟಾಗಿದೆ. ಹಲವೆಡೆ ರಾಶಿ ರಾಶಿ ಕಸ ಬಿದ್ದಿದೆ.
ಈ ನಡುವೆ ಪೌರ ಕಾರ್ಮಿಕರ ಧರಣಿಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಸರ್ಕಾರ ಇವರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ನಾನು ಅವರೊಂದಿಗೆ ಹೋರಾಟ ಮುಂದುವರಿಸುತ್ತೇನೆ ಎಂದು ಘೋಷಿಸಿದರು.
ನಗರದ ಸ್ವಾಸ್ಥ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳು ಈಡೇರುವವರೆಗೂ ಇಲ್ಲೇ ಊಟ, ತಿಂಡಿ ಮಾಡುತ್ತೇನೆ. ಇಲ್ಲೇ ಮಲಗುತ್ತೇನೆ ಎಂದು ಎಚ್ಚರಿಕೆ ನೀಡಿದರು.