ಬೆಂಗಳೂರು, ಫೆ 8 – ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕೈಗೊಳ್ಳಲು ಆರ್ಥಿಕ ನೆರವು ಮತ್ತು ಬಜೆಟ್ ನಲ್ಲಿ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಎನ್ ಎಸ್ ಯು ಐ ಕಾರ್ಯಕರ್ತರು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರ ಕಚೇರಿ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನಿನ್ನೆ ಮುಖ್ಯಮಂತ್ರಿಯ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿಗಳು ಮತ್ತು ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಧರಣಿ ನಡೆಸಿದ ಬೆನ್ನೆಲ್ಲೇ, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕಾ ಪ್ರಹಾರ ನಡೆಸಿದ್ದರು.
ಅದರಲ್ಲೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಂತೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರ್ಕಾರ ಯಾವುದೇ ರೀತಿಯ ತಾರತಮ್ಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲ ಸೀತಾರಾಮನ್ ಅವರ ಕಚೇರಿ ಮುಂದೆ ಕೆಲಕಾಲ ಧರಣಿ ನಡೆಸಿದ ಎನ್ ಎಸ್ ಯು ಐ ಕಾರ್ಯಕರ್ತರು ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಆಪಾದಿಸಿದರು.
ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಹೋಮೆಯು ದ್ವನಿಯುತ್ತದ ಈ ಸಚಿವರು ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಅವರ ಹೆಸರಿನ ನಾಮಫಲಕ್ಕೆ ಮಸಿ ಬಳಿದರು.
ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಮಸಿ ಬಳಿದ ಆರೋಪದಲ್ಲಿ ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಮಬುವವರನ್ನು ಪೊಲೀಸರು ವಶಕ್ಕೆ ಪಡೆದು, ಪ್ರತಿಭಟನಾಕಾರರನ್ನು ಚದುರಿಸಿದರು.
ಮುತ್ತಿಗೆ ಯತ್ನ ಮತ್ತೊಂದೆಡೆ ರಾಜ್ಯದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿ ಪಕ್ಷದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಅವರು ಒಮ್ಮೆಯೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂದು ಆರೋಪಿಸಿ ಅವರ ಮಂಗಳೂರು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಎನ್ ಎಸ್ ಯು ಐ ಕಾರ್ಯಕರ್ತರು ಸಂಸದ ಕಟೀಲ್ ವಿರುದ್ಧ ಘೋಷಣೆಗಳನ್ನು ಮೊಳಗಿಸಿ,ಅವರ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.