ಬೆಂಗಳೂರು, ಜು.25-
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವುದರೊಳಗೆ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಮಂತ್ರಿಗಳು ಶಾಸಕರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ ಎಂದು ಆರೋಪಿಸಿ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಇಪ್ಪತ್ತಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದಾರೆ.
ಶಾಸಕರ ಈ ಆಕ್ಷೇಪದ ಹಿನ್ನಲೆಯಲ್ಲಿ ಗುರುವಾರ ಸಂಜೆ ನಗರದ ಖಾಸಗಿ ಹೋಟಲ್‍ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಸಂಪುಟದ ಸಚಿವರು, ಶಾಸಕರುಗಳ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ, ವರ್ಗಾವಣೆ ಸೇರಿದಂತೆ ಯಾವ ವಿಷಯದಲ್ಲೂ ಶಾಸಕರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಅಸಮಾಧಾನವನ್ನು ಪತ್ರದಲ್ಲಿ ಹೊರಹಾಕಿದ್ದಾರೆ.
ಹಣಕ್ಕೆ ಬೇಡಿಕೆ:
ಅನುದಾನ ಬಿಡುಗಡೆಗೆ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಅಧಿಕ ಸಚಿವರು ಅನುದಾನ ನೀಡುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಅಲ್ಲದೇ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಬೇಸರದ ವಿಷಯ ಎಂದು ನೋವು ತೋಡಿಕೊಂಡಿದ್ದಾರೆ.
ತಮಗೆ ಬೇಕಾದ ಅಧಿಕಾರಿಗೆ ಮಣೆ ಹಾಕಿ ಸ್ವಜನಪಕ್ಷಪಾತ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ