ಬೀದರ್, ಜ.17:
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ರಾತ್ರಿ ಬೀದರ್‌ನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಣ್ಣ ಖಂಡ್ರೆ ಅವರನ್ನು ಬೀದರ್ ನಗರದ ಗುಡಗೆ ಮಲ್ಟಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒಂದು ವಾರ ಕಾಲ ಜೀವರಕ್ಷಕ ಉಪಕರಣಗಳ ನೆರವಿನಿಂದ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಸೋಮವಾರ (ಜ.12) ಅವರನ್ನು ಮನೆಗೆ ಕರೆದೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಮಧ್ಯಂತರದಲ್ಲಿ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದ್ದರೂ, ಶುಕ್ರವಾರ ರಾತ್ರಿ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅವರು ಕೊನೆಯುಸಿರೆಳೆದರು.
ತಂದೆಯ ಅನಾರೋಗ್ಯದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ, ಮೊಮ್ಮಗ ಸಾಗರ ಖಂಡ್ರೆ ಸೇರಿದಂತೆ ಕುಟುಂಬದ ಸದಸ್ಯರು ಕಳೆದ ಹಲವು ದಿನಗಳಿಂದ ಎಲ್ಲ ರೀತಿಯ ಸಾರ್ವಜನಿಕ ಹಾಗೂ ಅಧಿಕೃತ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲಿಯೇ ಇದ್ದರು.
ಭೀಮಣ್ಣ ಖಂಡ್ರೆಯವರ ಆರೋಗ್ಯದಲ್ಲಿ ಏರುಪೇರಾದ ವಿಷಯ ತಿಳಿದು ಹಲವು ಮಠಾಧೀಶರು, ಸಚಿವರು, ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಬೆಂಬಲಿಗರು ನಿರಂತರವಾಗಿ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು.
ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಭೀಮಣ್ಣ ಖಂಡ್ರೆ ಅವರು, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು.
ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ ಶನಿವಾರ (ಜ.17) ನಡೆಯಲಿದೆ ಎಂದು ಅವರ ಪುತ್ರ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

