ಬೆಂಗಳೂರು,
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸುವ ಘೋಷಣೆ ಮಾಡಿರುವ ಜೆಡಿಎಸ್ ಇದೀಗ ತನ್ನ ಭದ್ರಕೋಟೆ ಹಳೆ ಮೈಸೂರು ಪ್ರಾಂತ್ಯದಲ್ಲಿ ಸಂಘಟನೆಯನ್ನು ಬಲಪಡಿಸಿಕೊಳ್ಳಲು ಹೊಸ ರಣತಂತ್ರ ರೂಪಿಸ ತೊಡಗಿದೆ.
ಇದರ ಪರಿಣಾಮವಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಕುರಿತಂತೆ ಸಮಾಲೋಚನೆ ಆರಂಭಗೊಂಡಿದ್ದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಗೇಟ್ ಪಾಸ್ ನೀಡಲು ತೀರ್ಮಾನಿಸಿದ್ದಾರೆ.
ಮೈಸೂರಿನಲ್ಲಿ ಪಕ್ಷ ಸಂಘಟನೆ ಕುರಿತಾಗಿ ಮಾಜಿ ಪ್ರಧಾನಿ ದೇವೇಗೌಡ ಅವರ ಸಮ್ಮುಖದಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು ಇದರಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಯಿಂದ ಬಿಡಿಸಿಕೊಂಡು ನಿಖಿಲ್ ಕುಮಾರಸ್ವಾಮಿ ಅವರನ್ನು ಅಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಡಬೇಕು ಈಗ ಹಾಲಿ ಬಿಜೆಪಿ ಶಾಸಕ ನಾಗೇಂದ್ರ ಮತ್ತು ಮಾಜಿ ಸಂಸದ ಪ್ರತಾಪ ಸಿಂಹ ನಡುವೆ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಕೂಡ ಒಬ್ಬರು ಇನ್ನೊಬ್ಬರ ವಿರುದ್ಧ ಕೆಲಸ ಮಾಡುವ ಸಾಧ್ಯತೆ ಇದೆ ಹೀಗಾಗಿ ಈ ಕ್ಷೇತ್ರವನ್ನು ಬಿಜೆಪಿಯಿಂದ ಪಡೆದುಕೊಂಡು ಅಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು. ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಮತದಾರರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ ಹೀಗಾಗಿ ನಿಖಿಲ್ ಇಲ್ಲಿಂದ ಸುಲಭವಾಗಿ ಆಯ್ಕೆಯಾಗಬಹುದು ಎನ್ನುವುದು ಮೈಸೂರಿನ ಜೆಡಿಎಸ್ ನಾಯಕರ ಲೆಕ್ಕಾಚಾರವಾಗಿದೆ ಇದನ್ನು ಮಾಜಿ ಪ್ರಧಾನಿ ದೇವೇಗೌಡ ಅವರ ಗಮನಕ್ಕೆ ತಂದಿದ್ದು ಅದಕ್ಕೆ ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.
ಇನ್ನು ಕಳೆದ ಕೆಲವು ತಿಂಗಳುಗಳ ಹಿಂದೆ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿರುವ ಮಾಜಿ ಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ ಅವರನ್ನು ಪಕ್ಷದಿಂದ ಹೊರ ಹಾಕುವ ಕುರಿತಂತೆಯೂ ಚರ್ಚೆ ನಡೆದಿದೆ ಸದ್ಯದ ಪರಿಸ್ಥಿತಿಯಲ್ಲಿ ಅವರನ್ನು ಪಕ್ಷದಿಂದ ಕೈ ಬಿಡುವ ಬದಲಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಟಿ ದೇವೇಗೌಡ ಅವರು ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಬೇರೆಯವರಿಗೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಚಾಮರಾಜ ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಮಂತ್ರಿ ಸಾ.ರಾ. ಮಹೇಶ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಇವರು ಕಣಕ್ಕಿಳಿದಲ್ಲಿ ಚಾಮರಾಜ ಕ್ಷೇತ್ರಕ್ಕೂ ಪ್ರಭಾವ ಬೀರಲಿ ಹೀಗಾಗಿ ಎರಡು ಕ್ಷೇತ್ರಗಳು ಜೆಡಿಎಸ್ ಪಾಲಾಗಲಿವೆ ಎನ್ನುವುದು ಕಾರ್ಯತಂತ್ರದ ಲೆಕ್ಕಾಚಾರವಾಗಿದೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಜಿಟಿ ದೇವೇಗೌಡ ಅವರ ಬದಲಿಗೆ ಸಾರ ಮಹೇಶ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಕಳೆದ ವಿಧಾನ ಪರಿಷತ್ ಚುನಾವಣೆ ಮತ್ತು ಸಹಕಾರ ಸಂಘದ ಚುನಾವಣೆಯಲ್ಲಿ ಜಿಟಿ ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿಗಳ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಹೀಗಾಗಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
Previous Articleಅಬಕಾರಿ ಇಲಾಖೆಯಲ್ಲಿ ಲಂಚಾವತಾರ
Next Article ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

