ಬೆಂಗಳೂರು – ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಮಲ ಪಾಳಯದಲ್ಲಿ ವಿದ್ಯಮಾನಗಳು ವಿದ್ಯಮಾನಗಳು ಚುರುಕು ಪಡೆದುಕೊಂಡಿವೆ.
ಕಳೆದ ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಸದ್ಯದಲ್ಲೇ ನಡೆಯುವ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭಗೊಂಡಿದೆ.
ಈ ಕುರಿತು ತೀರ್ಮಾನ ತೆಗೆದುಕೊಳ್ಳಲು ಪಕ್ಷದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆಯೋಜಿಸಿದ್ದಾರೆ ಈ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಗಮಿಸುತ್ತಿದ್ದು ಪ್ರತಿಪಕ್ಷ ನಾಯಕನ ಆಯ್ಕೆ ಕುರಿತಂತೆ ಶಾಸಕರ ಅಭಿಪ್ರಾಯ ಆಲಿಸಲಿದ್ದಾರೆ ಬಹುತೇಕ ಅಂದೇ ಪ್ರತಿಪಕ್ಷ ನಾಯಕನ ಘೋಷಣೆಯು ಹೊರಬೀಳುವ ಸಾಧ್ಯತೆ ಇದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಹಿರಿಯ ಶಾಸಕರಾದ ಆರ್ ಅಶೋಕ್, ಡಾ. ಅಶ್ವಥ್ ನಾರಾಯಣ, ಸುರೇಶ್ ಕುಮಾರ್, ಸುನಿಲ್ ಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿರುವುದರಿಂದ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಈ ಸಮುದಾಯ ಹೊರತುಪಡಿಸಿ ಒಕ್ಕಲಿಗ ಇಲ್ಲವೆ ಹಿಂದುಳಿದ ಸಮುದಾಯಕ್ಕೆ ಸೇರಿದವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಮಲ್ಕಾಪುರೆ. ತೇಜಸ್ವಿನಿ ಗೌಡ,ಶಶೀಲ್ ನಮೋಶಿ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ಶುಕ್ರವಾರ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಯಾರ ಪರವಾಗಿ ಹೆಚ್ಚಿನ ಬೆಂಬಲ ಸಿಗಲಿದೆಯೋ ಅವರಿಗೆ ಈ ಸ್ಥಾನಗಳು ಒಲಿಯಲಿವೆ.