ಬೆಂಗಳೂರು
ಮಹಾನಗರ ಬೆಂಗಳೂರಿನಲ್ಲಿ ಜಾರಿಗೊಳಿಸಿರುವ ಇ ಖಾತಾ ಪದ್ಧತಿಯನ್ನು ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲೂ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಅಕ್ರಮ ಬಡಾವಣೆಗಳ ವಿರುದ್ಧ ತಮ್ಮ ಸರ್ಕಾರ ಸಮರ ಘೋಷಿಸಲಿದೆ ಎಂದು ಪ್ರಕಟಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಮಂಜೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು
ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ಪಟ್ಟಿ ಮಾಡಲಾಗುತ್ತಿದ್ದು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ತಿಳಿಸಿದರು
ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು
ರಾಜ್ಯದಲ್ಲಿ ಬಡಾವಣೆ ನಿರ್ಮಾಣ ಮಾಡುವವರು ನಕ್ಷೆ, ವಿನ್ಯಾಸ ಅನುಮೋದನೆಯನ್ನು ಪಡೆಯುವುದು ಕಡ್ಡಾಯ.ಅದಿಲ್ಲದೆ ಬಡಾವಣೆ ನಿರ್ಮಾಣ ಮಾಡಿದರೆ ಅದು ಅಕ್ರಮವಾಗುತ್ತದೆ. ಇಂತಹ ಬಡಾವಣೆಗಳಲ್ಲಿನ ನಿವೇಶನಗಳಿಗೆ ಖಾತೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೇ, ಅಂತಹ ಬಡಾವಣೆಗಳ ನಿವೇಶನಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿಯನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಗಟ್ಟಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1960 ರ ಕಲಂ 17(4) ರ ಅಡಿಯಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬಡಾವಣೆ ಮಾಲೀಕರಿಗೆ ನೋಟಿಸ್ ನೀಡಿ ಅಕ್ರಮ ನಿರ್ಮಾಣವನ್ನು ತಡೆಗಟ್ಟಲು ವಿಫಲರಾಗುವ ಅಧಿಕಾರಿಗಳಿಗೆ ದಂಡ ವಿಧಿಸುವ ಅಥವಾ ಅಮಾನತು ಮಾಡುವ ಅಥವಾ ಕೆಲಸದಿಂದಲೇ ವಜಾ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂದರು.
ಬಡವರಿಗೆ ನಿವೇಶನ:
ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಬಡವರಿಗೆ ನಿವೇಶನ ನೀಡುವ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಭೂಮಾಲೀಕರಿಗೆ ಶೇ.50 ಮತ್ತು ನಿವೇಶನಗಳಿಗೆ ಶೇ.50 ರಷ್ಟು ಪ್ರದೇಶವನ್ನು ಮೀಸಲಿಟ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು ಮಾದರಿಯಲ್ಲಿ ಆಸ್ತಿಗಳಿಗೆ ಇ-ಖಾತೆಯನ್ನು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಅಭಿಪ್ರಾಯ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
Previous Articleಕೆಟ್ಟು ನಿಂತ ಬಸ್ಸಿನಲ್ಲಿ ಸುಟ್ಟು ಕರಕಲಾದ !
Next Article ಕಾಂಗ್ರೆಸ್ ಹೈಕಮಾಂಡ್ ಸಂದೇಶ ಗೊತ್ತಾ ?