ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಆದರೂ ಕೇಂದ್ರ ಸರ್ಕಾರ ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಬಸವರಾಜು ಬೊಮ್ಮಾಯಿ ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು? ಇದರ ತೀರ್ಮಾನ ಮಾಡುವವರು ಯಾರು? ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪರಿಹಾರ ನೀಡಲೆಂದೇ ನಾವಿದ್ದೇವೆ. ಇದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಇದೆಯಲ್ಲವೇ? ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ? ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ? ಎಂದು ಪ್ರಶ್ನಿಸಿದರು.
ನೀರಾವರಿ ಯೋಜನೆಗಳ ಕುರಿತು ಮಾತನಾಡಿದ ಅವರು, ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ, ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ ಎಂದು ತಿಳಿಸಿದರು.
Previous Articleಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ
Next Article KSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ

