ಬೆಂಗಳೂರು, ಜು. 25:
ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮಹಾನಗರ ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ಮಸೂದೆ ಬಗ್ಗೆ ಅಧ್ಯಯನ ನಡೆಸಲು ಸದನ ಸಮಿತಿ ರಚನೆಗೆ ಸರ್ಕಾರ ಸಿದ್ಧವಿದೆ.
ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಸೂದೆ ಪರಾಮರ್ಶಿಸಲು ಸದನ ಸಮಿತಿ ರಚನೆಗೆ ನಮ್ಮ ಒಪ್ಪಿಗೆ ಇದೆ ಎಂದುತಿಳಿಸಿದರು.
ಮಸೂದೆ ಮಂಡಿಸಿ ಮಾತನಾಡಿದ ಅವರು, ಬೆಂಗಳೂರು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು, ನಗರದ ಜನಸಂಖ್ಯೆ1.40 ಕೋಟಿಗೆ ಏರಿದೆ. ಬೆಂಗಳೂರನ್ನು ಅತ್ಯುತ್ತಮ ನಗರವಾಗಿ ಮಾಡಬೇಕು. ಅಂತರರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ಹೆಸರು ಮಾಡುತ್ತಿದ್ದು, ರಾಜ್ಯ ರಾಜಧಾನಿಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಬಿಲ್ ಗೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ” ಎಂದು ಹೇಳಿದರು.
ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದ ಸದನ ಸಮಿತಿ ರಚಿಸಬೇಕು. ವಿಶೇಷ ಚರ್ಚೆ ಮಾಡಬೇಕು. ಬಿಲ್ ಅನ್ನು ಬಾಕಿ ಇರಿಸಬೇಕು ಎಂದು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಅಶೋಕ್ ಹಾಗೂ ಸೋಮಶೇಖರ್ ಅವರು ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನ ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ ಅವರು ನನ್ನನ್ನು ಭೇಟಿ ಮಾಡಿ ಒಂದಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನಮಗೂ ಸಹ ತರಾತುರಿಯಲ್ಲಿ ಈ ಬಿಲ್ ಅನ್ನು ತರುವ ಆಲೋಚನೆ ಇಲ್ಲ. ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ ಅವರ ಬಳಿಯೂ ಈ ವಿಚಾರವಾಗಿ ಚರ್ಚೆ ನಡೆಸಿದ್ದೇನೆ. ಈ ವಿಚಾರವಾಗಿ ಸದನ ಸಮಿತಿ ರಚನೆ ಮಾಡಲು ನಮ್ಮ ಒಪ್ಪಿಗೆಯಿದೆ” ಎಂದು ಹೇಳಿದರು.
Previous Articleಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
Next Article ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.

