ಬೆಂಗಳೂರು, ಜೂ.27-ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಿ ಜನರೊಂದಿಗೆ ನಿಕಟ ಸಂಪರ್ಕ ಹೊಂದಲು ಮನೆಮನೆಗೆ ಪೊಲೀಸ್ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗಿದೆ.
ಸಮುದಾಯ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಿ ಅಪರಾಧ, ಸೈಬರ್ ಅಪರಾಧ,ಶಾಂತಿ ಸುವ್ಯವಸ್ಥೆ ಕಾಪಾಡುವುದು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧ ತಡೆಯುವ ದಿಸೆಯಲ್ಲಿ ಮನೆಮನೆಗೆ ಪೊಲೀಸ್ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಗರದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಪೊಲೀಸ್ ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ತಿಳುವಳಿಕೆ ಬೆಳೆಸುವುದು ಮತ್ತು ಪೌರಸಹಭಾಗಿತ್ವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಇಲಾಖೆಯು ಪ್ರಗತಿಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಪೊಲೀಸ್ ಇಲಾಖೆಯು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವಾ ದಿಟ್ಟ ನೋಟದೊಂದಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.
ಈ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸರ್ವರನ್ನೂ ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸುತ್ತದೆ ಎಂದರು.
ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣ. ಈ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸ್ಥಳೀಯ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರ ನಡುವೆ ನೇರ ಸಂವಹನವನ್ನು ಸ್ಥಾಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಪ್ರತಿದಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಜನರೊಂದಿಗೆ ಬೆರೆತು, ಅವರ ಸಮಸ್ಯೆಗಳನ್ನು ಕೇಳಿ ತ್ವರಿತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ.
ಮಾದಕವಸ್ತು ದುರ್ಬಳಕೆ ಇತ್ತೀಚಿನ ದಿನಗಳಲ್ಲಿ ಒಂದು ಜಾಗತಿಕ ಸಮಸ್ಯೆಯಾಗಿದ್ದು ಸಂಕೀರ್ಣ ಸವಾಲಾಗಿದೆ. ಇಂದು ಲಕ್ಷಾಂತರ ಜನರು ಇದಕ್ಕೆ ದಾಸರಾಗಿದ್ದಾರೆ. ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದ್ದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆಮನೆಗೆ ಭೇಟಿ ನೀಡಿದಾಗ ಇವುಗಳ ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ಹೇಳಿದರು.
ಮನೆಮನೆಗೆ ಪೊಲೀಸ್ ಉಪಕ್ರಮದ ಭಾಗವಾಗಿ ಶಾಲಾ-ಕಾಲೇಜುಗಳಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮಗಳು, ಮಹಿಳಾ ಭದ್ರತೆ ಕುರಿತ ಕಾರ್ಯಾಗಾರಗಳು ಮತ್ತು ಯುವಜನರಿಗೆ ಪೊಲೀಸ್ ಸೇವೆಗಳ ಬಗ್ಗೆ ಅರಿವು ಮೂಡಿಸುವ ಸಭೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"square_fit":1},"is_sticker":false,"edited_since_last_sticker_save":true,"containsFTESticker":false}