ಬೆಂಗಳೂರು,ಮೇ.22:
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿರುವ ಬೆನ್ನಲ್ಲೇ ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿಯವರು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡುವ ವೇಳೆ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಪ್ರಸ್ತಾಪಿಸಿದ್ದರು.
ಹಾಸನದ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ರಾಹುಲ್ ಗಾಂಧಿ ಅವರು ಇಲ್ಲಿ ಮಾಡಿದ ಭಾಷಣದ ವರದಿಗಳು ಮತ್ತು ವಿಡಿಯೋ ದಾಖಲೆಗಳೊಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿದ ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ನೇತೃತ್ವದ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದೆ.
ಜವಾಬ್ದಾರಿ ಸ್ಥಾನದಲ್ಲಿರುವ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು ಚುನಾವಣಾ ಭಾಷಣದಲ್ಲಿ ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ನೊಂದ ಮಹಿಳೆಯರ ಪರವಾಗಿ ಮಾತನಾಡುವುದನ್ನು ಬಿಟ್ಟು
ಈ ರೀತಿ ಮಾತನಾಡಿರುವುದು ಕಾನೂನುಬಾಹಿರ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು 400 ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ರೇಪ್ ಮಾಡಿದ್ದಾರೆ ಎಂದು ಹೇಳಿದ್ದು ಅವರಲ್ಲಿ ಈ ಕುರಿತಾದ ಎಲ್ಲಾ ಮಾಹಿತಿ ಇರಬಹುದು ಈ ಹಿನ್ನಲೆಯಲ್ಲಿ ಎಸ್ಐಟಿ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಬೇಕು ಎಂದು ಆಗ್ರಹಿಸಿದ್ದಾರೆ.
Previous Articleಪೋಲಿಸ್ ಬಲೆಗೆ ಬಿದ್ದ ಆನ್ ಲೈನ್ ವಂಚಕರು.
Next Article ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.