ನವದೆಹಲಿ,ಸೆ.17:
ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ವಿರುದ್ಧದ
ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಹಿಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ದುರುದ್ದೇಶ ಪೂರ್ವಕವಾಗಿ ಈ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಹೇಳಿದ ರಾಜ್ಯ ಸರ್ಕಾರ ಸಿಬಿಐನಿಂದ ಪ್ರಕರಣವನ್ನು ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆ ವಹಿಸಿದೆ.
ರಾಜ್ಯ ಸರ್ಕಾರದ ಈ ಕ್ರಮ ತನಿಖೆಯ ಹಾದಿ ತಪ್ಪಿಸುವಂತಿದೆ ಎಂದು ಆಪಾದಿಸಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದು ತಮ್ಮ ಕಾರ್ಯ ವ್ಯಾಪ್ತಿಗೆ ಬರುವುದಿಲ್ಲ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಬಹುದಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾ ಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿ.ಕೆ ಶಿವಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿ ಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಲೋಕಾಯುಕ್ತ, ಸಿಬಿಐ, ರಾಜ್ಯ ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.
Previous Articleಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
Next Article ಅತಿಶಿ ವಿರುದ್ಧ ಸ್ಮೃತಿ ಇರಾನಿ.